ದೊಡ್ಡಬಳ್ಳಾಪುರ : ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಗ್ರಾಮದ ರೈತರ ಜಮೀನುಗಳಿಗೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ ಜಮೀನುಗಳಿಗೆ, ಕೊಳೂರು ಕೆರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು ಮುಂಗಾರು ಮಳೆ ಕೊರತೆಯಾಗುವ ಸಂಭವವಿದ್ದು ರೈತರು ಕಡಿಮೆ ಅವಧಿಯ ರಾಗಿ ಬಿತ್ತನೆ ಮಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಲಭ್ಯವಿದೆ. ಕಡಿಮೆ ಅವಧಿಯ ರಾಗಿ ಬೆಳೆ ಬಗ್ಗೆ ಕೃಷಿ ಅಧಿಕಾರಿಗಳ ಬಳಿ ಮಾಹಿತಿ ಬಿತ್ತನೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು. ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿರುವ ರಾಗಿಗೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ, ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು
ಈ ಸಂಧರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಶಿವಕುಮಾರ್, ಎಸಿ ಮಂಜುನಾಥ್, ಕೃಷಿ ಜಂಟಿ ನಿರ್ದೇಶಕಿ ಕಲಾವತಿ, ಅಧಿಕಾರಿಗಳು ಉಪಸ್ಥಿತರಿದ್ದರು.
