ತೂಬಗೆರೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಸೇರಿದಂತೆ ವಿವಿಧ ಶಾಲೆಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ತೂಬಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲೆ ಉಷಾ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.
ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ 2008ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಕಳೆದ ಸಾಲಿನಲ್ಲಿ ಶಾಲಾ ಮಟ್ಟದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್, ಕೆಪಿಸಿಸಿ ಸದಸ್ಯ ಮುನಿರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸತ್ಯನಾರಾಯಣಪ್ಪ, ಹಿರಿಯ ಸದಸ್ಯ ಮುನಿಕೃಷ್ಣಪ್ಪ, ಕೃಷ್ಣಪ್ಪ, ಮುಖಂಡ ರಾಮಕೃಷ್ಣ, ರಾಜಗೋಪಾಲ್, ಯುವ ಮುಖಂಡ ಉದಯ ಆರಾಧ್ಯ, ಎಸ್ಡಿಎಂಸಿ ಅಧ್ಯಕ್ಷ ಹನುಮಂತರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಇದೇ ವೇಳೆ ತೂಬಗೆರೆ ಸರ್ಕಾರಿ ಆರೋಗ್ಯ ಕೇಂದ್ರ, ನಾಡಕಚೇರಿ, ಪಶು ಆರೋಗ್ಯ ಕೇಂದ್ರ, ಹಾಲು ಉತ್ಪಾದಕರ ಸಹಕಾರ ಸಂಘ, ತೂಬಗೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘ ಸೇರಿದಂತೆ ವಿವಿಧ ಸರ್ಕಾರಿ ಹಾಗೂ ಸಹಕಾರ ಸಂಸ್ಥೆಗಳ ಕಚೇರಿಗಳಲ್ಲೂ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
