
Hksuddi ದೊಡ್ಡಬಳ್ಳಾಪುರ : ತಾಲೂಕಿನ ಗೂಳ್ಯ ಕ್ರಾಸ್ ನಿಂದ ಗ್ರಾಮದವರೆಗೆ ಸುಮಾರು ಅರ್ಧ ಕಿಲೋಮೀಟರ್ ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಸುಮಾರು 35 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದ್ದ ಈ ರಸ್ತೆ ನಂದಿಬೆಟ್ಟ ಕ್ರಾಸ್ ಹಾಗೂ ಲಿಂಗನಹಳ್ಳಿ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ.
ಕಾರ್ಯಕ್ರಮದಲ್ಲಿ ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ,ರಸ್ತೆ ಹದಗೆಟ್ಟಿರುವುದನ್ನು ಗಮನಿಸಿದ್ದ ಸಚಿವರು ಕೂಡಲೇ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿ, ಕೊಟ್ಟ ಮಾತಿನಂತೆ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ.ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸೂಚನೆಯಂತೆ ಇಂದು ಗುದ್ದಲಿ ಪೂಜೆ ಮಾಡಲಾಗಿದೆ. ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜ್ ಮಾತನಾಡಿ, ಸಚಿವರ ಸಹಕಾರದಿಂದ ತೂಬಗೆರೆ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಬಿಜೆಪಿ ಮತ್ತು ಜೆಡಿಎಸ್ಗೆ ಅಂತಹ ಇತಿಹಾಸವಿಲ್ಲ. ಮುಂದಿನ ದಿನಗಳಲ್ಲಿ ಸಾಲುಸಾಲು ಚುನಾವಣೆಗಳು ಎದುರಾಗಲಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.
ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಮಾತನಾಡಿ, ರಸ್ತೆ ಕಾಮಗಾರಿಗೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಶಾಸಕರ ಅನುದಾನದಲ್ಲಿ ಚಾಲನೆ ದೊರೆತಿದೆ. ಹಳ್ಳಿಗಳು ಅಭಿವೃದ್ಧಿಯಾಗಬೇಕು ಎಂಬ ಮೂಲ ಉದ್ದೇಶದಿಂದ ಸಚಿವರು ತೂಬಗೆರೆ ಹೋಬಳಿಯ ಗ್ರಾಮಗಳಿಗೆ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರಿಗೆ ಅನುಕೂಲ ಕಲ್ಪಿಸಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸಚಿವರ ಸೂಚನೆಯಂತೆ ನಾವೆಲ್ಲರೂ ಶ್ರಮಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಕಾಂಗ್ರೆಸ್ ಮುಖಂಡ ಅರವಿಂದ್, ಎಸ್ಟಿ ಸಮುದಾಯದ ಅಧ್ಯಕ್ಷ ಮುನಿಕೃಷ್ಣಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್,ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಎಸ್ ಡಿ ಮುನಿರಾಜು,ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ ರಂಗಪ್ಪ, ದೊಡ್ಡಬಳ್ಳಾಪುರ ತಾಲೂಕು ಎಸ್ ಟಿ ಸಮುದಾಯದ ಅಧ್ಯಕ್ಷ ಮುನಿಕೃಷ್ಣಪ್ಪ, ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್, ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ, ಹನುಮಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮುರುಳಿ ಜಿ, ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




