
ದೊಡ್ಡಬಳ್ಳಾಪುರ : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನದಲ್ಲಿ ಶಾಸಕರ ನೇತೃತ್ವದಲ್ಲಿ ರೈತರ ಅಹವಾಲು ಹಾಗೂ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲನೆ ನೆಡೆಸಲಾಯಿತು

ಈ ವೇಳೆ ಮಾತನಾಡಿದ ಅವರು ಬಗರ್ ಹುಕುಂ ಸಮಿತಿಯಡಿ ನಡೆಯುವ ಭೂ ಮಂಜೂರಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರಿ ಲಂಚ ನೀಡಬಾರದು ಒಂದು ವೇಳೆ ಹಣಕ್ಕಾಗಿ ಯಾವುದೇ ಅಧಿಕಾರಿ ಬೇಡಿಕೆ ಇಟ್ಟರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಗರ್ ಹುಕುಂ ಸಮಿತಿಯ ಯಾವುದೇ ಪ್ರಕರಣದಲ್ಲಿ ಅಧಿಕಾರಿಗಳು ಲಂಚ ಕೇಳಿದರೆ ತಕ್ಷಣ ತಮ್ಮ ಗಮನಕ್ಕೆ ತರಬೇಕು. ಸಮಿತಿಯ ಕಾರ್ಯಚಟುವಟಿಕೆಗಳಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ವಿಐ, ಆರ್ಐ ಸೇರಿದಂತೆ ತಹಸೀಲ್ದಾರ್ ಅವರಿಗೂ ಸೂಚನೆ ನೀಡಲಾಗಿದೆ. ರೈತರಿಗೆ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ತಮ್ಮ ಗಮನಕ್ಕೆ ತರಬಹುದು ಎಂದು ತಿಳಿಸಿದರು.
ಬಗರ್ ಹುಕುಂ ಸಮಿತಿಯಲ್ಲಿ ಅರ್ಜಿ ಪಾಸ್ ಆಗದಿರುವುದು, ಅರ್ಜಿ ಮಂಜೂರಾದರೂ ಸಾಗುವಳಿ ಚೀಟಿ ದೊರೆಯದಿರುವುದು ಹಾಗೂ ಸಾಗುವಳಿ ಚೀಟಿ ನೀಡಿದರೂ ಪಹಣಿ ಸಿಗದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶಾಸಕರ ಕಚೇರಿ ಅಥವಾ ತಮ್ಮ ನಿವಾಸಕ್ಕೆ ಭೇಟಿ ನೀಡಿ ತಿಳಿಸಿದರೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಫಾರ್ಮ್ 57 ಮತ್ತು 53ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಕೆಯಲ್ಲಿ ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸ್ಮಶಾನಕ್ಕೆ ಹೋಗಲು ಹೆಲಿಕಾಪ್ಟರ್ ಕೊಡಿಸಿ!
ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯ ಕಸಬಾ ಹೋಬಳಿಯ ವೀರಭದ್ರನಪಾಳ್ಯ ಗ್ರಾಮದ ಸರ್ವೆ ನಂಬರ್ 51ರ ಕೆಮ್ಮಣ್ಣುಗುಂಡಿ ಸಾರ್ವಜನಿಕ ಸ್ಮಶಾನಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ಖಾಸಗಿ ವ್ಯಕ್ತಿಗಳು ನಿರ್ಮಿಸಿರುವ ಎತ್ತರದ ಕಾಂಪೌಂಡ್ ತೆರವುಗೊಳಿಸಿ, ಸಾರ್ವಜನಿಕ ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಕನ್ನಡ ಪಕ್ಷದ ಮುಖಂಡರು ಶಾಸಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡ ಸಂಜೀವ್ ನಾಯಕ್, ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದರೂ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಅಧಿಕಾರಿಗಳು ಸಮಸ್ಯೆ ಬಗೆಹರಿಸುವವರೆಗೂ ನಮಗೆ ಒಂದು ಹೆಲಿಕಾಪ್ಟರ್ ಕೊಡಿಸಲಿ. ಯಾರಾದರೂ ಮೃತಪಟ್ಟರೆ ಹೆಲಿಕಾಪ್ಟರ್ ಮೂಲಕ ಸ್ಮಶಾನಕ್ಕೆ ಕರೆದೊಯ್ಯುತ್ತೇವೆ. ಸ್ಮಶಾನಕ್ಕೆ ಹೋಗಲು ದಾರಿ ಬಿಡದೆ ಖಾಸಗಿ ವ್ಯಕ್ತಿಗಳು ಗಲಾಟೆ ಮಾಡುತ್ತಿದ್ದಾರೆ. ನಾವಾದರೂ ಏನು ಮಾಡಬೇಕು?” ಎಂದು ಪ್ರಶ್ನಿಸಿದರು.
ಬಿಸಿಲಿನಲ್ಲಿ ಬಸವಳಿದ ಸಾರ್ವಜನಿಕರು
ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ನಡೆದ ಪ್ರಜಾ ಸೇವಾ ಆಂದೋಲನಕ್ಕೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಕೋರಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲಿಖಿತ ಅರ್ಜಿಗಳನ್ನು ಸಲ್ಲಿಸಿದರು.ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿತ್ತು. ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಬಂದಿದ್ದ ಜನರು ಆಯಾ ಇಲಾಖೆಗಳ ಕೌಂಟರ್ಗಳ ಮುಂದೆ ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸಿದರು.ಆದರೆ, ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳಗಳಲ್ಲಿ ಕನಿಷ್ಠ ನೆರಳಿನ ವ್ಯವಸ್ಥೆಯನ್ನೂ ಕಲ್ಪಿಸದಿರುವುದು ಜನರ ಅಸಮಾಧಾನಕ್ಕೆ ಕಾರಣವಾಯಿತು. ಬಿಸಿಲಿನ ತಾಪಕ್ಕೆ ಜನರು ಬಸವಳಿಯುತ್ತಾ ಅರ್ಜಿ ಸಲ್ಲಿಸುತ್ತಿದ್ದರೆ, ಮತ್ತೊಂದೆಡೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪೆಂಡಾಲ್ನ ನೆರಳಿನಲ್ಲಿ ಕುಳಿತು ಅರ್ಜಿಗಳನ್ನು ಸ್ವೀಕರಿಸುತ್ತಿದ್ದ ದೃಶ್ಯ ಕಂಡುಬಂತು. ಜನರ ಅಹವಾಲು ಆಲಿಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕನಿಷ್ಠ ನೆರಳಿನ ವ್ಯವಸ್ಥೆ ಕಲ್ಪಿಸುವ ಕಾಳಜಿಯನ್ನೂ ವಹಿಸದಿರುವುದು ಅಧಿಕಾರಿಗಳ ಕಾರ್ಯವೈಖರಿ ಕುರಿತು ಪ್ರಶ್ನೆ ಮೂಡಿಸಿದೆ.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಲ್ಲಪ್ಪ ಯರಗೋಳ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




